
ಶ್ರೀರಾಮಸೇನೆ ನೇತೃತ್ವದಲ್ಲಿ ದತ್ತಮಾಲಾ ಅಭಿಯಾನ ಆರಂಭವಾಗಿದೆ. ದತ್ತಮಾಲಾಧಾರಿಗಳು ಏಳು ದಿನಗಳ ಕಾಲ ಕಠಿಣ ವ್ರತದಲ್ಲಿದ್ದು, ಕೊನೆಯ ದಿನ (ನವೆಂಬರ್ 10 ರಂದು) ದತ್ತಪೀಠಕ್ಕೆ ಆಗಮಿಸುತ್ತಾರೆ. ಅಂದು, ದತ್ರಪೀಠದಲ್ಲಿ ಹೋಮ-ಹವನ ನಡೆಯುತ್ತದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪೊಲೀಸರು ನಗರದಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲಾದ್ಯಂತ ಏಳು ದಿನಗಳ ಕಾಲ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದೆ.ಚಂದ್ರದ್ರೋಣ ಪರ್ವತ ಸಾಲಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ. ಚಂದ್ರದ್ರೋಣ ಪರ್ವತ ಸಾಲಿನಲ್ಲಿರುವ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ ಮತ್ತು ಗಾಳಿಕೆರೆ ಸೇರಿದಂತೆ ಸುತ್ತಮುತ್ತಲಿನ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡುವುದನ್ನು ನವೆಂಬರ್ 9ರ ಬೆಳಗ್ಗೆ 6 ಗಂಟೆಯಿಂದ ನವೆಂಬರ್ 11ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಿಸಲಾಗಿದೆ.









